ಸ್ವಾತಂತ್ರ್ಯೋತ್ಸವ ದಿನಕ್ಕೆ 15 ದಿನಗಳಿಂದ ಕಟ್ಟೆಚ್ಚರ ವಹಿಸಿರುವ ಪೊಲೀಸರು
ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಭಾರಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಆಗಸ್ಟ್ ೧೫ ರಂದು ಮಾಣೆಕ್ ಷಾ ಪರೇಡ್ ಗ್ರೌಂಡ್ನಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಿಹರ್ಸಲ್ ಕಾರ್ಯಕ್ರಮ ಮಾಡಲಾಗಿದೆ. ಕಾರ್ಯಕ್ರಮ ಹಿನ್ನೆಲೆ ೧೫ ದಿನಗಳಿಂದ ಕಟ್ಟೆಚ್ಚರವಹಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೆ ಬಿಗಿ ಭದ್ರತೆಗಾಗಿ ೧೦ ಡಿಸಿಪಿ, ೧೭ ಎಸಿಪಿ, ೪೨ ಇನ್ಸ್ಪೆಕ್ಟರ್, ೧೧೨ ಪಿಎಸ್ಐ, ೬೨ ಎಎಸ್ಐ, ೫೧೧ ಕಾನ್ಸ್ಟೇಬಲ್ಗಳು, ೭೨ ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. ೧೨೯ ಮಂದಿ ಮಫ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಸಿಸಿಟಿವಿ ಪರಿಶೀಲನೆ ಮಾಡುವುದಕ್ಕೆಂದೇ ೨೭ ಸಿಬ್ಬಂದಿ ನೇಮಕ ಮಾಡಲಾಗಿದೆ. ಹೆಚ್ಚುವರಿಯಾಗಿ ಹತ್ತು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸಂಚಾರ ನಿರ್ವಹಣೆ ವಿಚಾರವಾಗಿಯೂ ಪೊಲೀಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.