ಸ್ವಯಂಸೇವಾ ಸಂಸ್ಥೆಯೊಂದಕ್ಕೆ 20 ಲಕ್ಷ ರೂಪಾಯಿಗೆ ಟೆಂಡರ್
ಚಿಕ್ಕಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಲು 20 ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗಿದ್ದು, ಈಗಾಗಲೇ ಟೆಂಡರ್ ಕರೆದು ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಜವಾಬ್ದಾರಿ ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಬೀದಿನಾಯಿಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿ, 20 ಲಕ್ಷ ರೂಪಾಯಿಗಳನ್ನು ಮೀಸಲಿಟ್ಟು ಟೆಂಡರ್ ಸಹಾ ಕರೆದು ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಬೀದಿನಾಯಿಗಳ ಸಂತಾನಹೆಣ ಶಸ್ತ್ರಚಿಕಿತ್ಸೆಯ ಜವಾಬ್ದಾರಿ ನೀಡಲಾಗಿದೆ.
ನಗರದಲ್ಲಿ 2 ಸಾವಿರ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಗುರಿ ಹೊಂದಲಾಗಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ. ಸಿಟಿಜನ್ ಕ್ಲಬ್ ಆವರಣದಲ್ಲಿ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.